ಉಡುಪಿಯಲ್ಲಿ ನಡೆದ ಸಭೆಯಲ್ಲಿ ಪರಿಷತ್ ಸದಸ್ಯ ಐವನ್ ಕರೆ
ಉಡುಪಿ: ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಒತ್ತಾಯ ಮಾಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು. ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಮಂಗಳವಾರ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ಚರ್ಚಿಸಲು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದೆ. ಈ ಭಾಗದಲ್ಲಿ ಹೈಕೋರ್ಟ್ ಪೀಠಕ್ಕೆ ಅಗತ್ಯವಿರುವ ಮೂಲಸೌಕರ್ಯ, ಕಾನೂನು ವೃತ್ತಿಪರರು ಹಾಗೂ ಇತರ ಸಂಪನ್ಮೂಲಗಳು ಸಾಕಷ್ಟು ಪ್ರಮಾಣದಲ್ಲಿವೆ. ಹೀಗಾಗಿ ಕರಾವಳಿಯ ಜನರ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಕರಾವಳಿಯಲ್ಲಿ ಐಟಿ ಕಂಪನಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾನೂನು ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕರಾವಳಿ ಭಾಗದ ಜನರು ಸಣ್ಣಪುಟ್ಟ ಕಾನೂನು ವಿಚಾರಗಳಿಗೂ ದೂರದ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ಇರುವುದರಿಂದ, ಈ ಭಾಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಹಿಂದೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿತ್ತು. ಈ ಬೇಡಿಕೆಯ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ಮೂರು ಮಂದಿ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಕರಾವಳಿ ಸೇರಿದಂತೆ ಒಟ್ಟು ಆರು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಮೂಲಸೌಕರ್ಯ ಹಾಗೂ ಇತರ ಅಗತ್ಯತೆಗಳ ಕುರಿತು ಪರಿಶೀಲನೆ ನಡೆಸಲಿದೆ. ಬಳಿಕ ತನ್ನ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಲಿದೆ ಎಂದು ಐವನ್ ಡಿಸೋಜ ತಿಳಿಸಿದರು.
ಹೈಕೋರ್ಟ್ ಪೀಠದ ಬೇಡಿಕೆ ಯಾವುದೇ ಒಂದು ಪಕ್ಷ ಅಥವಾ ಸಂಘಟನೆಯ ವಿಚಾರವಾಗದೆ, ಕರಾವಳಿಯ ಜನರ ಒಟ್ಟಾರೆ ಹಿತಾಸಕ್ತಿಗೆ ಸಂಬಂಧಿಸಿದ ವಿಷಯವಾಗಿದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು, ವಕೀಲರ ಸಂಘಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳು ಒಟ್ಟಾಗಿ ಪಕ್ಷಾತೀತವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಉಡುಪಿ ವಕೀಲ ಸಂಘದ ಮಾಜಿ ಕಾರ್ಯದರ್ಶಿ ರಾಜೇಶ್ ಎಆರ್, ಮಾಜಿ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ವಕೀಲರಾದ ಸಚಿನ್ ಕುಮಾರ್ ಶೆಟ್ಟಿ, ಮೆಲ್ವಿನ್ ನೊರೋನ್ಹಾ, ಪ್ರಶಾಂತ್ ಪೂಜಾರಿ, ಪದ್ಮಪ್ರಸಾದ್, ರಾಘವೇಂದ್ರ, ಗೌತಮ್ ಹಾಗೂ ಪ್ರವೀಣ್ ಆದ್ಯಪಾಡಿ ಉಪಸ್ಥಿತರಿದ್ದರು.
“ಸಂಚಾರಿ ಪೀಠಕ್ಕೆ ಅಗತ್ಯವಿರುವ ಸ್ಥಳವಕಾಶವು ದಕ್ಷಿಣ ಜಿಲ್ಲೆಯ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಭ್ಯವಿದೆ. ಹೀಗಾಗಿ ತುರ್ತಾಗಿ ಪೀಠವನ್ನು ಆರಂಭಿಸಲು ಯಾವುದೇ ತೊಡಕುಗಳಿಲ್ಲ. ಅಲ್ಲದೇ ಸರಕಾರವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದರು. ”
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”