ಶಿರ್ವ, ಪಡುಬಿದ್ರೆ, ಹೆಬ್ರಿ ಪೋಲಿಸರ ಮಿಂಚಿನ ಕಾರ್ಯಾಚರಣೆ

ಕಾಪು: ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿ ಕಳತ್ತೂರು ಗ್ರಾಮದ ಉಮ್ಮರಬ್ಬ (64) ಸೆ.19ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶರೀಫ್ (31), ಶಂಶುದ್ದೀನ್ (57) ಹಾಗೂ ಮಹಮ್ಮದ್ ಆಸೀರ್ (24) ಅವರನ್ನು ಸೆ.20ರಂದು ಕಾಪುವಿನ ಕೊಪ್ಪಲಂಗಡಿ ಬಳಿ ವಾಹನ ಸಮೇತ ಪತ್ತೆಹಚ್ಚಿ ಬಂಧಿಸಲಾಗಿದೆ.
ಸೆ.19ರಂದು ಸಂಜೆ 4 ಗಂಟೆ ಸುಮಾರಿಗೆ ಕಾಪು ತಾಲೂಕು ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ವಸಂತಿ ಸುನೀತಾ ಕ್ವಾಡ್ರಸ್ ಎಂಬುವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಎರಡು ವರ್ಷದ ಕಪ್ಪು ಬಣ್ಣದ ಒಂದು ದನ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿ ನಿಂತಿದ್ದ KA-19-B-5641 ನೋಂದಣಿ ಸಂಖ್ಯೆಯ ಟೆಂಪೋದಲ್ಲಿ ಕಾಣೆಯಾಗಿದ್ದ ದನ ಪತ್ತೆಯಾಗಿದ್ದು, ಅದರೊಂದಿಗೆ ಮತ್ತೊಂದು ದನವೂ ಇರುವುದು ಕಂಡುಬಂದಿದೆ.
ಎರಡೂ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಲಾಗಿತ್ತು. ಈ ವೇಳೆ ಟೆಂಪೋ ಬಳಿಯಲ್ಲಿ ದೂರುದಾರರಿಗೆ ಪರಿಚಯವಿದ್ದ ಉಮ್ಮರಬ್ಬ ಸೇರಿದಂತೆ ನಾಲ್ವರು ಇದ್ದರು. ದೂರುದಾರರನ್ನು ಕಂಡ ಕೂಡಲೇ ಆರೋಪಿಗಳು ಟೆಂಪೋವನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಸಂತಿ ಸುನೀತಾ ಕ್ವಾಡ್ರಸ್ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಕೃತ್ಯಕ್ಕೆ ಬಳಸಿದ್ದ KA-19-B-5641 ಟೆಂಪೋ ಹಾಗೂ ದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ನಾಲ್ವರು ಆರೋಪಿಗಳ ಬಂಧನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಆಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಶಿರ್ವ ಠಾಣೆ ಉಪನಿರೀಕ್ಷಕ ಮಂಜುನಾಥ ಮರಬದ, ಪಡುಬಿದ್ರಿ ಠಾಣೆ ಉಪನಿರೀಕ್ಷಕ ಶಕ್ತಿವೇಲು.ಇ, ಅನಿಲ್ ಕುಮಾರ್ ಟಿ. ನಾಯ್ಕ್, ಹೆಬ್ರಿ ಠಾಣೆ ಉಪನಿರೀಕ್ಷಕ ಲೋಹಿತ್ ಕುಮಾರ್ ಹಾಗೂ ಶಿರ್ವ, ಕಾಪು, ಪಡುಬಿದ್ರಿ ಠಾಣೆಗಳ ಸಿಬ್ಬಂದಿ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಿ.ಡಿ.ಆರ್. ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”