ಕೋಟ ಠಾಣೆಯಲ್ಲಿ ಪ್ರಕರಣ ದಾಖಲು

ಕೋಟ: ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ಗುಜರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿ ₹2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದು, ಬಳಿಕ ₹1 ಲಕ್ಷ ನೀಡುವಂತೆ ಒತ್ತಾಯಿಸಿ ಜೀವ ಬೆದರಿಕೆ ಹಾಕಿದ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ.31ರಂದು ಬೆಳಗ್ಗೆ ಸುಮಾರು 11.30ರ ವೇಳೆಗೆ ಎರಡನೇ ಆರೋಪಿ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ದೂರುದಾರರ ಮನೆಯ ಅಂಗಳದಲ್ಲಿ ಇಟ್ಟಿರುವುದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ದೂರುದಾರರು ಮನೆಗೆ ಆಗಮಿಸಿದಾಗ ಸಚಿನ್ ಎಂಬಾತ ಆಟೋ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಅಲಿಯಾಸ್ ಎಸ್ಟಿಡಿ ಪ್ರದೀಪ್ ಬೈಕ್ನಲ್ಲಿ ಬಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ವೇಳೆ ನಾಗೇಂದ್ರ ಪುತ್ರನ್, ತಾನು ಸಾಮಾಜಿಕ ಕಾರ್ಯಕರ್ತನೆಂದು ಹೇಳಿಕೊಂಡು, ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ವಿಡಿಯೋ ಮಾಡಿರುವುದಾಗಿ ತಿಳಿಸಿ, ಸರಕಾರದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಅಲ್ಲದೆ, ಈ ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ ₹2 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು, ದೂರುದಾರರು ಹಣ ನೀಡಲು ಸಾಧ್ಯವಿಲ್ಲ ಎಂದು ವಿನಂತಿಸಿಕೊಂಡಾಗ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ₹1 ಲಕ್ಷ ಹಣ ನೀಡಬೇಕು. ಇಲ್ಲವಾದರೆ ಜನರನ್ನು ಹಾಗೂ ತನ್ನ ಹುಡುಗರನ್ನು ಕರೆಸಿ ಹೊಡೆದು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸುಮಾರು ಮಧ್ಯಾಹ್ನ 2.45ರವರೆಗೂ ಆರೋಪಿ ಹಣ ನೀಡದೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಎನ್ನಲಾಗಿದೆ.
ಈ ಸಂದರ್ಭದಲ್ಲಿ ದೂರುದಾರರ ಮಕ್ಕಳು ಸ್ಥಳಕ್ಕೆ ಬಂದಿದ್ದು, ಆರೋಪಿ ಮತ್ತೆ ಅವಾಚ್ಯವಾಗಿ ನಿಂದಿಸಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿ ದೂರುದಾರರು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಬೆದರಿಕೆ, ಹಣಕ್ಕೆ ಬೇಡಿಕೆ ಹಾಗೂ ಇತರ ಆರೋಪಗಳ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”